ನಾವು ಅಧಿಕಾರಕ್ಕೆ ಬಂದರೆ, ಅವರ ಅಕ್ರಮಗಳ ಕುರಿತು ತನಿಖೆ: ಯಡಿಯೂರಪ್ಪ

ಜಲ ಸಂಪನ್ಮೂಲ ಇಲಾಖೆಯಲ್ಲಿ ನಡೆದಿರುವ ಭ್ರಷ್ಟಾಚಾರಗಳ ಬಗ್ಗೆ ನಾವು ಅಧಿಕಾರಕ್ಕೆ ಬಂದ ಕೂಡಲೇ ತನಿಖೆಗೆ ಒಪ್ಪಿಸಲಾಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ, ಬೆಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ಧರಾಮಯ್ಯ ಮತ್ತು ಜಲಸಂಪನ್ಮೂಲ ಸಚಿವರು ಸೇರಿ ಹಗಲು ದರೋಡೆಗೆ ಇಳಿದಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಅವರ ಅಕ್ರಮಗಳ ಕುರಿತು ತನಿಖೆ ನಡೆಸಿ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದರು.

ಅಧಿಕಾರ ಮದದಿಂದ ಮನಸೋ ಇಚ್ಛೆ ಮಾತನಾಡುತ್ತಿರುವ ಜಲಸಂಪನ್ಮೂಲ ಸಚಿವರಿಗೆ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಸೋಲು ಕಟ್ಟಿಟ್ಟ ಬುತ್ತಿ ಎಂದು ಯಡಿಯೂರಪ್ಪ ಭವಿಷ್ಯ ನುಡಿದರು. ಕ್ಷೇತ್ರದ ಜನರ ಶಾಪ ಅವರ ತಟ್ಟದೆ ಬಿಡದು ಎಂದರು.

ಜಲಸಂಪನ್ಮೂಲ ಇಲಾಖೆಯ ಜಾಹೀರಾತುಗಳಿಗೆ ಒಟ್ಟು 36 ಸಾವಿರ ಕೋಟಿ ಖರ್ಚು ಮಾಡಿದ್ದಾರೆ ಎನ್ನುತ್ತಿದ್ದಾರೆ. ಆದರೆ ಕೃಷ್ಣ ಕೊಳ್ಳದ ನೀರಾವರಿ ಯೋಜನೆಗಳಿಗೆ 10 ಸಾವಿರ ಕೋಟಿ ನೀಡುವುದಾಗಿ ಹೇಳಿದವರು, ಇಲ್ಲಿಯವರೆಗೆ ಕೇವಲ 5350 ಕೋಟಿ ಮಾತ್ರ ನೀಡಿದ್ದಾರೆ ಎಂದು ಆರೋಪಿಸಿದರು.