ಡಿವೈಎಸ್ಪಿ ಗಣಪತಿ ಪ್ರಕರಣ ಸಿಬಿಐಗೆ, ಮತ್ತೆ ಸಂಕಷ್ಟದಲ್ಲಿ ಜಾರ್ಜ್ – News Mirchi

ಡಿವೈಎಸ್ಪಿ ಗಣಪತಿ ಪ್ರಕರಣ ಸಿಬಿಐಗೆ, ಮತ್ತೆ ಸಂಕಷ್ಟದಲ್ಲಿ ಜಾರ್ಜ್

ಡಿವೈಎಸ್ಪಿ ಗಣಪತಿ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಪ್ರಕರಣದ ತನಿಖೆಯನ್ನು ಸಿಬಿಐ ವಹಿಸಿ ಆದೇಶಿಸಿದೆ. ಹೀಗಾಗಿ ಬೆಂಗಳೂರು ಅಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್ ಗೆ ಮತ್ತೆ ಸಂಕಷ್ಟ ಎದುರಾಗಿದೆ.

ಪ್ರಕರಣದಲ್ಲಿ ಸಚಿವ ಕೆ.ಜೆ.ಜಾರ್ಜ್ ಮತ್ತು ಇಬ್ಬರು ಅಧಿಕಾರಿಗಳ ಹೆಸರು ಪ್ರಸ್ತಾಪವಾಗಿರುವುದರಿಂದ ಸಿಬಿಐ ತನಿಖೆ ಅಗತ್ಯವಾಗಿದೆ. ಎಂದು ಕೋರ್ಟ್ ಅಭಿಪ್ರಾಯ ಪಟ್ಟಿದೆ. ತನಿಖೆಯನ್ನು ಮೂರು ತಿಂಗಳೊಳಗೆ ಪೂರ್ಣಗೊಳಿಸಿ ವರದಿ ಸಲ್ಲಿಸುವಂತೆ ಕೋರ್ಟ್ ಸಿಬಿಐಗೆ ಸೂಚಿಸಿದೆ.

ತನಿಖೆಯನ್ನು ಸುಪ್ರೀಂ ಕೋರ್ಟ್ ಸಿಬಿಐ ಗೆ ವಹಿಸಿದ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿರುವ ಕೇಂದ್ರ ಸಚಿವ ಅನಂತ ಕುಮಾರ್, ಗಣಪತಿ ಅವರ ಪ್ರಕರಣದಲ್ಲಿ ಸಂಪೂರ್ಣ ಸತ್ಯ ಹೊರಬರಬೇಕು, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಹೇಳಿದ್ದಾರೆ. ಪ್ರಕರಣದ ತನಿಖೆಯನ್ನು ಸುಪ್ರೀಂ ಕೋರ್ಟ್ ಸಿಬಿಐ ಗೆ ವಹಿಸಿದ ಹಿನ್ನೆಲೆಯಲ್ಲಿ ಸಚಿವ ಜಾರ್ಜ್ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಅಥವಾ ಮುಖ್ಯಮಂತ್ರಿಗಳು ಅವರನ್ನು ಸಂಪುಟದಿಂದ ಕೈಬಿಡಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಇನ್ನು ಈ ಕುರಿತು ಪ್ರತಿಕ್ರಿಯಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಸಚಿವ ಜಾರ್ಜ್ ಮತ್ತು ಇಬ್ಬರು ಅಧಿಕಾರಿಗಳು ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ. 2 ದಿನದಲ್ಲಿ ಜಾರ್ಜ್ ರಾಜೀನಾಮೆ ನೀಡದಿದ್ದರೆ ರಾಜ್ಯಾದ್ಯಂತ ಹೋರಾಟ ಮಾಡಬೇಕಾಗುತ್ತದೆ ಎಂದು ಅವರು ಎಚ್ಚರಿಸಿದ್ದಾರೆ.

ಆತ್ಮಹತ್ಯೆಗೂ ಮುನ್ನ ಟಿವಿ ಸಂದರ್ಶನದಲ್ಲಿ ಡಿವೈಎಸ್ಪಿ ಗಣಪತಿ

ಆತ್ಮಹತ್ಯೆಗೆ ಶರಣಾಗುವ ಮುನ್ನ ಸ್ಥಳೀಯ ಟಿವಿ ಚಾನೆಲ್ ಗೆ ಸಂದರ್ಶನ ನೀಡಿದ್ದ ಡಿವೈಎಸ್ಪಿ ಗಣಪತಿ, ತಮಗೆ ಏನಾದರೂ ಆದರೆ ಅದಕ್ಕೆ ಕಾರಣ ಅಂದಿನ ಸಚಿವ ಕೆ.ಜೆ.ಜಾರ್ಜ್, ಐಪಿಎಸ್ ಅಧಿಕಾರಿ ಪ್ರಣವ್ ಮೊಹಂತಿ ಮತ್ತು ಎ.ಎಂ ಪ್ರಸಾದ್ ಎಂದು ಹೇಳಿದ್ದರು. ಈ ಹಿನ್ನೆಲೆಯಲ್ಲಿ ಗಣಪತಿ ಅವರ ಸಾವಿಗೆ ಸಚಿವರು ಮತ್ತು ಹಿರಿಯ ಅಧಿಕಾರಿಗಳ ಕಿರುಕುಳವೇ ಕಾರಣ ಎಂಬ ಆರೋಪಗಳು ಕೇಳಿಬಂದಿದ್ದವು. ಡಿವೈಎಸ್ಪಿ ಎಂ.ಕೆ.ಗಣಪತಿ ಅವರ ಸಾವಿನ ಕುರಿತ ತನಿಖೆಯನ್ನು ಸಿಬಿಐ ಗೆ ವಹಿಸಲು ಆದೇಶಿಸುವಂತೆ ಗಣಪತಿ ಅವರ ತಂದೆ ಕುಶಾಲಪ್ಪ ಮತ್ತು ಸಹೋದರ ಮಾಚಯ್ಯ ಅರ್ಜಿ ಸಲ್ಲಿಸಿದ್ದರು. ಇದೀಗ ಆದರ್ಶ್ ಕುಮಾರ್ ಗೋಯಲ್ ಮತ್ತು ಯು.ಯು.ಲಲಿತ್ ಅವರ ನ್ಯಾಯಪೀಠ ಸಿಬಿಐ ತನಿಖೆಗೆ ಆದೇಶಿಸಿದೆ.

Loading...