ಉತ್ತರ ಕರ್ನಾಟಕದಿಂದ ಸ್ಪರ್ಧಿಸುವುದು ಖಚಿತ – News Mirchi

ಉತ್ತರ ಕರ್ನಾಟಕದಿಂದ ಸ್ಪರ್ಧಿಸುವುದು ಖಚಿತ

ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಉತ್ತರ ಕರ್ನಾಟಕದಿಂದ ಸ್ಪರ್ಧಿಸುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೂ ಉತ್ತರ ಕರ್ನಾಟಕದಿಂದ ಸ್ಪರ್ಧಿಸುವುದಾದರೆ ಸ್ವಾಗತಿಸುತ್ತೇನೆ ಎಂದು ಇದೇ ವೇಳೆ ಯಡಿಯೂರಪ್ಪ ಹೇಳಿದ್ದಾರೆ. ಆದರೆ ಯಡಿಯೂರಪ್ಪ ಅವರ ಮಾತಿಗೆ ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ, ಈ ವಿಷಯದಲ್ಲಿ ಹೈಕಮಾಂಡ್ ತೀರ್ಮಾನ ತೆಗೆದುಕೊಳ್ಳುತ್ತದೆ ಎಂದು ಹೇಳಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಯಡಿಯೂರಪ್ಪ, ಬಿಜೆಪಿ ಕೇಂದ್ರ ನಾಯಕತ್ವದ ಸಲಹೆ ಮೇರೆಗೆ ತವರು ಕ್ಷೇತ್ರ ಶಿಕಾರಿಪುರ ತೊರೆದು ಬೇರೆ ಕ್ಷೇತ್ರದಲ್ಲಿ ಸ್ಪರ್ಧಿಸಲು ನಿರ್ಧರಿಸಿರುವುದಾಗಿ ಹೇಳಿದರು. ಆದರೆ ಯಾವ ಕ್ಷೇತ್ರ ಎಂಬುದನ್ನು ಸ್ಪಷ್ಟ ಪಡಿಸಲಿಲ್ಲ.

ಕಲ್ಬುರ್ಗಿ ಜಿಲ್ಲಯ ಜೀವರ್ಗಿ ಕ್ಷೇತ್ರದಿಂದ ಸ್ಪರ್ಧಿಸುವಂತೆ ಒತ್ತಡವಿದೆ, ಹಾಗೆಯೇ ಬಾಗಲಕೋಟೆ ಮತ್ತು ವಿಜಯಪುರ ಜಿಲ್ಲೆಗಳಿಂದಲೂ ಸ್ಪರ್ಧಿಸುವಂತೆ ಒತ್ತಡಗಳು ಬರುತ್ತಿವೆ. ಆದರೆ ಅಂತಿಮ ನಿರ್ಧಾರವನ್ನು ಇನ್ನೂ ತೆಗೆದುಕೊಂಡಿಲ್ಲವೆಂದು ಅವರು ಹೇಳಿದರು. ಆದರೆ ಉತ್ತರ ಕರ್ನಾಟಕದಿಂದ ಸ್ಪರ್ಧಿಸುವುದಂತೂ ಖಚಿತ ಎಂದು ಸ್ಪಷ್ಟಪಡಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಸಂಪುಟದ ಸಚಿವರ ವಿರುದ್ಧ ಟೀಕಾ ಪ್ರಹಾರ ಮಾಡಿದ ಯಡಿಯೂರಪ್ಪ, ಒಂದು ವಾರದೊಳಗೆ ಕಾಂಗ್ರೆಸ್ ಪಕ್ಷದ ಭ್ರಷ್ಟಾಚಾರವನ್ನು ಬಯಲಿಗೆ ತರುತ್ತೇನೆ ಎಂದು ಹೇಳಿದರು. ಡಿವೈಎಸ್ಪಿ ಗಣಪತಿ ಅವರ ಸಾವಿನ ಕುರಿತಂತೆ ಉಂಟಾಗಿರುವ ವಿವಾದದ ಹಿನ್ನೆಲೆಯಲ್ಲಿ ಸಚಿವ ಜಾರ್ಜ್ ರಾಜೀನಾಮೆ ನೀಡಬೇಕು ಎಂದು ಅವರು ಒತ್ತಾಯಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ರಾಜಕೀಯ ಲಾಭಕ್ಕಾಗಿ ವೀರಶೈವ, ಲಿಂಗಾಯತ ಸಮುದಾಯವನ್ನು ಒಡೆಯಲು ಯತ್ನಿಸುತ್ತಿದ್ದಾರೆ. ಅದರಲ್ಲಿ ಅವರು ಯಶಸ್ಸು ಸಾಧಿಸುವುದಿಲ್ಲ ಎಂದು ಹೇಳಿದರು.

Get Latest updates on WhatsApp. Send ‘Add Me’ to 8550851559

Loading...